ಉಡುಪಿ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ-ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡಬಾರದು. ಹಾಗೂ ಜಿಲ್ಲೆಯ ಎಲ್ಲಾ ರಕ್ತ ಕೋಶ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ರಕ್ತದಾನಿಗಳ ಪಟ್ಟಿಯನ್ನು ಸಿದ್ಧ ಪಡಿಸಿಟ್ಟುಕೊಂಡು ಅವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Udupi News
ಮಲ್ಪೆಯಲ್ಲಿ ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಸವಾರನಿಗೆ ಗಂಭೀರ ಗಾಯ
ಉಡುಪಿ : ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಗುಂಡಿಬೈಲು ನಿವಾಸಿ ಲಕ್ಷ್ಮಣ (60) ಎಂದು ಗುರುತಿಸಲಾಗಿದೆ. ಅವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸಮಾಜಸೇವಕ ಈಶ್ವರ ಮಲ್ಪೆ ಮತ್ತು ತಂಡದವರು ಸಹಕರಿಸಿದರು. ಇವರಿಗೆ ಗುಂಡಿಬೈಲ್ನಲ್ಲಿ ವರ್ಕ್ ಶಾಪ್ ಇದೆ ಎನ್ನಲಾಗುತ್ತಿದೆ.
ಮಲ್ಪೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು ಬಸ್ನ ಹಿಂಭಾಗ ಜಖಂಗೊಂಡಿದೆ.

ಉಡುಪಿ: ತೀವ್ರ ಮಳೆಯ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾಡಳಿತ ವತಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಮುಂಚಿತವಾಗಿಯೇ ಉಡುಪಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಳೆಗಾಲಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜೊತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಕಡಿಯಬೇಕು ಎಂದು ಸೂಚಿಸಲಾಗಿತ್ತು. ಬೀಳುವ ಹಂತದಲ್ಲಿದ್ದ ಸುಮಾರು 400 ಮರಗಳನ್ನು ಕಡಿಯಲಾಗಿದ್ದು, 80 ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.
ಕೆಲವೊಂದು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಈ ಪ್ರದೇಶದಿಂದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಕಳೆದ ವರ್ಷ ಮಳೆಯಿಂದಾಗಿ ಎದುರಿಸಿದ್ದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಎಚ್ಚರಿಕೆ ವಹಿಸಲಾಗಿದೆ. ಗುಡ್ಡ ಕುಸಿತದಿಂದ ಕೆಲವು ಮನೆಗಳಿಗೆ ಹಾನಿ ಉಂಟಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ತ್ವರಿತಗತಿಯಲ್ಲಿ ಪರಿಹಾರ ನೀಡಲು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಉಡುಪಿ ನಗರದಲ್ಲಿ ಯುಜಿಡಿ ವ್ಯವಸ್ಥೆ ಇಲ್ಲ. ಹೀಗಾಗಿ ಮಳೆ ಬಂದರೆ ರಸ್ತೆಯ ಮೇಲೆ ನೀರು ನಿಲ್ಲುತ್ತದೆ. ನಾನು ಉಸ್ತುವಾರಿ ಸಚಿವೆಯಾದ ನಂತರದಲ್ಲಿ ಒಳಚರಂಡಿ ನಿರ್ಮಿಸಲು ನಿರ್ಧರಿಸಲಾಗಿದ್ದು, ಒಂದೆರಡು ವಾರಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ನಿನ್ನೆ ಹೆಚ್ಚು ಮಳೆಯಾದ ಕಾರಣ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಹೇಳಿದರು.