ಉಡುಪಿ : ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಬೆಳ್ಳೆ ಹಾಗೂ ಪಡುಬಿದ್ರೆ ಗ್ರಾಮಪಂಚಾಯತ್ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ 3 ಸದಸ್ಯ ಸ್ಥಾನಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308 ಎಎ ಮತ್ತು 308 ಎಬಿ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ ನಿಯಮಗಳು 1993ರ ನಿಯಮ 12 ರ ಅನ್ವಯ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿಗಳು ಈ ಸಂಬಂಘ ಎಪ್ರಿಲ್ 22ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಎಪ್ರಿಲ್ 28 ಕೊನೆ ದಿನವಾಗಿದೆ. ಎಪ್ರಿಲ್ 29ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 2 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮೇ 11 ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಮೇ 14ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕಾ ಕಾರ್ಯ ನಡೆಯಲಿವೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308 ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಪ್ರಿಲ್ 22ರಿಂದ ಮೇ 14ರವರೆಗೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.