ಮಾನವ ರಕ್ತಕ್ಕೆ ಪರ್ಯಾಯವಿಲ್ಲ; ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ಜಗತ್ತಿನಲ್ಲಿ ಮಾನವನ ರಕ್ತಕ್ಕೆ ಯಾವುದೇ ಪರ್ಯಾಯ ಇದುವರೆಗೆ ಬಂದಿಲ್ಲ. ಹೀಗಾಗಿ ಒಂದೊಂದು ರಕ್ತದ ಹನಿಯು ಮೌಲ್ಯಯುತವಾಗಿದ್ದು, ಅದನ್ನು ಸೃಜಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಅರ್ಹರು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ತಿಳಿಸಿದ್ದಾರೆ.

ಮಂಗಳವಾರ ಮಣಿಪಾಲದ ಎಂಐಎಎಂಎಸ್ ಬುದ್ಧ ಆಯುರ್ವೇದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ‌ಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, ರೋಟರ್ಯಾಕ್ಟ್ ಕ್ಲಬ್, ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್‌ನ ರಾಷ್ಟ್ರೀಯ ಸೇವಾ ಯೋಜನೆ, ಆದರ್ಶ ಕಾಲೇಜ್ ಆಫ್ ನರ್ಸಿಂಗ್, ಉಡುಪಿ ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್, ಶ್ರೀಆದರ್ಶ ಕಾಲೇಜ್ ಆಫ್ ಅಲೈಡ್ ಎಂಡ್ ಪ್ಯಾರಾ ಮೆಡಿಕಲ್ ಸೈನ್ಸ್ ಮತ್ತು ಎಚ್‌ಪಿಆ‌ರ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ ಎಂಡ್‌ ಪ್ಯಾರಾಮೆಡಿಕಲ್ ಸೈನ್ಸ್ ಮಣಿಪಾಲ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಮಾಜದಲ್ಲಿ ಅನೇಕರು ಸರಿಯಾದ ಸಮಯದಲ್ಲಿ ರಕ್ತ ದೊರೆಯದೇ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ರಕ್ತದಾನದ ಮೂಲಕ ಆಪತ್ತಿನಲ್ಲಿರುವವರ ಅಮೂಲ್ಯವಾದ ಜೀವವನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬ ರಕ್ತದಾನಿಯನ್ನು ಗುರುತಿಸಿ ಸನ್ಮಾನಿಸುವ ಮೂಲಕ ಅವರಿಗೆ ಇನ್ನಷ್ಟು ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಸಾಕಷ್ಟು ಮಂದಿ ರಕ್ತದಾನಿಗಳಿದ್ದು, ಇದುವರೆಗೂ ರಕ್ತದ ಕೊರತೆ ಕಂಡುಬಂದಿಲ್ಲ. ಅಲ್ಲದೇ ನಮ್ಮ ಅಕ್ಕಪಕ್ಕದ ಜಿಲ್ಲೆಗಳಲ್ಲಿ ರಕ್ತದ ಕೊರತೆ ಉಂಟಾದ ಸಂದರ್ಭದಲ್ಲಿ ಸಹ ನಮ್ಮ ಜಿಲ್ಲೆಯಿಂದಲೇ ರಕ್ತ ರವಾನೆ ಮಾಡಲಾಗುತ್ತಿದೆ. ರಕ್ತದ ಮಹತ್ವವನ್ನು ಅರಿತು ರಕ್ತದಾನ ಮಾಡಲು ಯುವ ಜನತೆ ಸ್ವಯಂಪ್ರೇರಿತವಾಗಿ ಮುಂದೆ ಬರಬೇಕು ಎಂದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !