ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿರುವ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ದೃಶ್ಯಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಒಂದೇ ದ್ವಿಚಕ್ರ ವಾಹನದಲ್ಲಿ ಐವರು ವಿದ್ಯಾರ್ಥಿಗಳು ಅಪಾಯಕಾರಿಯಾಗಿ ಸಂಚರಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ.

ಉಡುಪಿ ನಗರದಲ್ಲಿ ವಾಹನ ಸವಾರರು ಪ್ರತಿ ಹೆಜ್ಜೆಯಲ್ಲೂ ಟ್ರಾಫಿಕ್ ಪೊಲೀಸರ ತಪಾಸಣೆಗೆ ಒಳಗಾಗುತ್ತಿದ್ದಾರೆ. ಆದರೆ ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರನ್ನು ಪ್ರಶ್ನಿಸುವವರೇ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಮಣಿಪಾಲದ ವಿದ್ಯಾರ್ಥಿಗಳು ಪದೇ ಪದೇ ಸಂಚಾರ ನಿಯಮಗಳನ್ನು ಮುರಿಯುತ್ತಿರುವುದು ಗಮನಕ್ಕೆ ಬಂದಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಲಾಗಿದೆ.

ಅತ್ಯಂತ ಹೆಚ್ಚು ಅಪಘಾತಗಳು ಸಂಭವಿಸುವ ಉಡುಪಿ-ಮಣಿಪಾಲ ರಸ್ತೆಯಲ್ಲಿ ವಿದ್ಯಾರ್ಥಿಗಳು ಈ ರೀತಿ ನಿರ್ಲಕ್ಷ್ಯದಿಂದ ವರ್ತಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳ ಈ ಹುಚ್ಚಾಟಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ವಿದ್ಯಾರ್ಥಿಗಳ ಬೇಜವಾಬ್ದಾರಿತನವನ್ನು ಖಂಡಿಸಿದ್ದಾರೆ. ಅಲ್ಲದೆ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸದ ಪೊಲೀಸರ ಕಾರ್ಯವೈಖರಿಯನ್ನೂ ಪ್ರಶ್ನಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ತಾಲೂಕು ಸರಕಾರಿ ಆಸ್ಪತ್ರೆ,‌‌ ಆರೋಗ್ಯ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ