ಉಡುಪಿ : ಬೇಸಗೆಯಲ್ಲಿ ಜನಸಾಮಾನ್ಯರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸೂಚನೆ ನೀಡಿದರು.
ಜಿಲ್ಲಾದ್ಯಂತ ಪ್ರಸಕ್ತ ಸಾಲಿಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನೀರಿನ ಕೊರತೆಯಾಗುವ ಸಾಧ್ಯತೆಗಳು ಇಲ್ಲದಿದ್ದರೂ ಅಂತರ್ಜಲ ಕುಸಿತಗೊಂಡು ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು. ಹೀಗಾಗಿ ನೀರಿನ ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದರು.
ಕಳೆದ ಸಾಲಿನಲ್ಲಿ ಉಂಟಾದ ಮನೆ, ಜೀವ, ಜಾನುವಾರು, ಬೆಳೆ ಹಾನಿಗೆ ಪರಿಹಾರ ಮೊತ್ತವನ್ನು ಬಾಕಿ ಉಳಿಸಿಕೊಳ್ಳುವಂತಿಲ್ಲ. ಮಳೆಯಿಂದ ಹಾನಿಯಾದ ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ ಹಾಗೂ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಯಾಗಿದ್ದು, ತ್ವರಿತವಾಗಿ ಕಾಮಗಾರಿಗಳು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಈವರೆಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ದೂರುಗಳು ಬಂದಿಲ್ಲ ಎಂದ ಅವರು, ಜಿಲ್ಲೆಯ ಹಲವೆಡೆ ನೀರು ಸರಬರಾಜು ಮಾಡುವ ಪೈಪ್‌ಗಳು ಒಡೆದು ಹೋಗಿರುವ ಕುರಿತು ಮಾಹಿತಿಯಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು.
ಸಾಕಷ್ಟು ಮೇವನ್ನು ದಾಸ್ತಾನು ಇಟ್ಟುಕೊಳ್ಳುವಂತೆ ತಹಶೀಲ್ದಾರರು ನೋಡಿಕೊಳ್ಳಬೇಕು. ಈ ತಿಂಗಳ ಅಂತ್ಯದಿಂದಲೇ ಹಸಿ ಮೇವನ್ನು ಬೆಳೆಯಲು ಕ್ರಮ ವಹಿಸುವಂತೆ ಕೃಷಿ, ತೋಟಗಾರಿಕೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.