ಉಡುಪಿ : ನಕ್ಸಲ್ ವಿಕ್ರಮ್ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.
ಉಡುಪಿಯ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಎನ್‌ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಮ್ ಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ನಕ್ಸಲೈಟ್‌ಗಳನ್ನು ಕಟ್ಟಿ ಹಾಕಬೇಕು ಎಂಬುದು ಸರ್ಕಾರದ ನಿರ್ಧಾರ. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಮ್ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಮ್ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದರಿಂದ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು ಎಂದರು.
ನಕ್ಸಲೈಟನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಇಲ್ಲ
ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನಾ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.