ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಅಮಾಯಕ ಮೀನುಗಾರ ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಸಾವಿರಾರು ಮೀನುಗಾರರು ಬೃಹತ್ ಪ್ರತಿಭಟನೆ ನಡೆಸಿದರು. ಬಂಧಿತ ಮಹಿಳೆಯರನ್ನು ತಕ್ಷಣ ಬಿಡುಗಡೆ ಮಾಡಬೇಕು ಮತ್ತು ಅವರ ಮೇಲೆ ದಾಖಲಿಸಿರುವ ಜಾತಿ ನಿಂದನೆ ಪ್ರಕರಣವನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮಲ್ಪೆ ಮೀನುಗಾರರ ಸಂಘದ ನೇತೃತ್ವದ ಪ್ರತಿಭಟನೆಯಲ್ಲಿ, “ಈ ಪ್ರಕರಣದಲ್ಲಿ ಅಮಾಯಕ ಮಹಿಳೆಯರನ್ನು ಬಂಧಿಸಲಾಗಿದೆ. ಪೊಲೀಸರು ತಕ್ಷಣ ಅವರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.
ಬಂದರಿನಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಕಳ್ಳತನ ನಡೆದರೂ, ಮೀನುಗಾರ ಸಂಘದ ನೇತೃತ್ವದಲ್ಲೇ ಪ್ರಕರಣಗಳನ್ನು ಪರಿಹರಿಸಬೇಕು. ಪೊಲೀಸ್ ಇಲಾಖೆ ಸಂಘದ ಅನುಮತಿ ಇಲ್ಲದೆ ಬಂದರಿನ ಸಮಸ್ಯೆಗಳಲ್ಲಿ ಮಧ್ಯಪ್ರವೇಶಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರಕರಣಕ್ಕೆ ಮೂಲ ಕಾರಣರಾದ ಹೆಡ್ ಕಾನ್ಸ್ಟೇಬಲ್ ಲೋಕೇಶ್ ಮತ್ತು ಲಕ್ಷ್ಮಣ್ ಅವರನ್ನು ತಕ್ಷಣ ಅಮಾನತು ಮಾಡಬೇಕು ಎಂದು ಮೀನುಗಾರರು ಒತ್ತಾಯಿಸಿದರು.
ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ನಾಲ್ಕು ದಿನಗಳ ಗಡುವು ನೀಡಲಾಗಿದ್ದು, ಈ ಅವಧಿಯೊಳಗೆ ನ್ಯಾಯ ಒದಗಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಮೀನುಗಾರರು ಎಚ್ಚರಿಸಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಮತ್ತು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ್ ಸುವರ್ಣ ಭಾಗವಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.