ಉಡುಪಿ : ‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷ ವಾಕ್ಯದೊಂದಿಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅತ್ಯಗತ್ಯ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಅವರು ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಸಹಯೋಗದೊಂದಿಗೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯಲ್ಲಿ ಯೋಗ ದಿನವನ್ನು ಪ್ರಸ್ತಾವಿಸಿದ ಫಲವಾಗಿ 177 ದೇಶಗಳ ಬೆಂಬಲದೊಂದಿಗೆ ಕಳೆದ 10 ವರ್ಷಗಳಿಂದ ಭಾರತದ ಸಹಿತ ನೂರಾರು ದೇಶಗಳು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಆಚರಿಸುತ್ತಿರುವುದು ಐತಿಹಾಸಿಕ ದಾಖಲೆಯಾಗಿದೆ.
ಬದುಕಿನ ಆಸೆ ಆಕಾಂಕ್ಷೆಗಳು ಈಡೇರಲು ಆರೋಗ್ಯ ಅತ್ಯವಶ್ಯಕ. ಈ ನಿಟ್ಟಿನಲ್ಲಿ ಶಿಸ್ತು ಬದ್ಧ ಜೀವನ ಕ್ರಮದ ಜೊತೆಗೆ ಯೋಗಾಭ್ಯಾಸದ ಕೊಡುಗೆ ಮಹತ್ವಪೂರ್ಣ ಎಂದು ಯಶ್ಪಾಲ್ ಸುವರ್ಣ ಹೇಳಿದರು.
ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಉಡುಪಿ ಸಮಿತಿಯ ಯೋಗ ಶಿಕ್ಷಕ ನಾಗರಾಜ ಕಿಣಿ ಯೋಗದ ಕುರಿತು ಮಾಹಿತಿಯನ್ನು ನೀಡಿ ಯೋಗ ತರಗತಿಯನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಯೋಗ ದಿನಾಚರಣೆಯ ಜಿಲ್ಲಾ ಸಂಚಾಲಕರಾದ ವಿಜಯಕುಮಾರ್ ಉದ್ಯಾವರ, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾಮತ್, ಮಹಿಳಾ ಮೋರ್ಚಾ ಉಡುಪಿ ನಗರಾಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ, ಉಡುಪಿ ಗ್ರಾಮಾಂತರ ಅಧ್ಯಕ್ಷೆ ರಮ್ಯಾ ರಾವ್, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಆಸಿಫ್ ಕಟಪಾಡಿ, ಯೋಗ ಶಿಕ್ಷಕಿ ಶೋಭಾ ಶೆಟ್ಟಿ, ಅನಿತಾ ಸುವರ್ಣ, ಚೆನ್ನಮ್ಮ ಉಡುಪ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.